1ಹೊಸಗೀತೆಯನು ಹಾಡಿರಿ ಪ್ರಭುವಿಗೆ I
ವಿಶ್ವವೆಲ್ಲವು ಹಾಡಲಿ ಆತನಿಗೆ II
2ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ I
ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II
3ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I
ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II
4ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I
ಸಕಲ ದೇವರುಗಳಿಗಿಂತಲೂ ಘನಗಂಭೀರನು II
5ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I
ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II
6ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I
ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II
7ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I
ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II
8ಆತನ ನಾಮಕೆ ತನ್ನಿ ಘನತೆಗೌರವವನು I
ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು II
9ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I
ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I
10ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I
ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I
ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II
11ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು I
ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು II
12ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು I
ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II
13ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I
ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II